ಉಡುಪಿಮಿತ್ರ ಪತ್ರಿಕೆ ಸುದ್ಧಿ :
ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ವಂಡ್ಸೆ, ಜೂನ್ ೫:
ಬೈಂದೂರು ಕ್ಷೇತ್ರವು ಪ್ರಕೃತಿ ಸೌಂದರ್ಯದಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿನ ಆಲೂರಿನ ಡಾ. ರಾಜೇಶ್ ಬಾಯರಿಯವರ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯವು ಇಡೀ ಬೈಂದೂರು ಭಾಗಕ್ಕೆ ಮಾದರಿಯಾಗಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.ಅವರು ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ನಿರ್ಮಿಸಲಾದ ಚಿತ್ರಕೂಟ ಔಷಧಿ ವನವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಚಿಂತಕ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಸಮಿತಿ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ ಮಾತನಾಡಿ, ಡಾ. ರಾಜೇಶ್ ಬಾಯರಿಯವರು ಆಯುರ್ವೇದ ಕ್ಷೇತ್ರದಲ್ಲಿ ಹಲವು ಹೊಸ ಪ್ರಯೋಗಗಳನ್ನು ನಡೆಸುತ್ತಾ ಚಿತ್ರಕೂಟ ಸಂಸ್ಥೆಯನ್ನು ಉತ್ತಮ ಮಟ್ಟಕ್ಕೆ ಬೆಳೆಸಿದ್ದಾರೆ ಎಂದು ಶ್ಲಾಘಿಸಿದರು.

ಪರಿಸರ ಸಂರಕ್ಷಣೆ ಕುರಿತು ಮಾತನಾಡಿದ ಅವರು, ಔಷಧೀಯ ಸಸ್ಯಗಳ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದರು. ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವ ಪ್ರವೃತ್ತಿಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಮಳೆಗಾಲದಲ್ಲಿ ಇವು ಸಮುದ್ರ ಸೇರಿ ಜಲಚರಗಳ ಜೀವಕ್ಕೆ ಅಪಾಯ ಉಂಟುಮಾಡುತ್ತವೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಆಡಳಿತ ನಿರ್ದೇಶಕ ಡಾ. ರಾಜೇಶ್ ಬಾಯರಿ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕುಂದಾಪುರ ಅರಣ್ಯ ವಿಭಾಗದ ಅರಣ್ಯ ಅಧಿಕಾರಿ ದಿಲೀಪ್ ಕುಮಾರ್ ಬಿ.ವಿ. ಮಾತನಾಡಿ, ಪ್ರಕೃತಿಯೊಂದಿಗಿನ ನಂಟು ಮಾನವ ಜೀವನಕ್ಕೆ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ, ಹಿರಿಯ ಕೃಷಿಕ ಮಹಾಬಲ ಬಾಯರಿ, ಡಾ. ಅನುಲೇಖಾ ಬಾಯರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಡಾ. ರಾಜೇಶ್ ಬಾಯರಿ ಮಾತನಾಡಿ, ಚಿತ್ರಕೂಟಕ್ಕೆ ವಿದ್ಯಾರ್ಥಿಗಳು ಹಾಗೂ ಪ್ರಕೃತಿ ಪ್ರೇಮಿಗಳು ಭೇಟಿ ನೀಡುತ್ತಿದ್ದು, ಔಷಧೀಯ ಸಸ್ಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಔಷಧಿ ವನವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀ ಲತಾ ಪ್ರಾರ್ಥನೆ ನೆರವೇರಿಸಿದರು. ಡಾ. ರಾಜೇಶ್ ಬಾಯರಿ ಸ್ವಾಗತಿಸಿದರು. ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು



