udupimitra.in
  • July 26, 2026
  • Last Update July 26, 2026 4:29 pm
  • Brahmavara

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾಕೂಟ ಆಯೋಜನೆ ಕುರಿತು ಪೂರ್ವಭಾವಿ ಸಭೆ

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾಕೂಟ ಆಯೋಜನೆ ಕುರಿತು ಪೂರ್ವಭಾವಿ ಸಭೆ

ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಕುಂದಾಪುರ, ಜು.೨೫ :
ಕುಂದಾಪುರ: ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆಯ ಹಾಗೂ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಸಹಯೋಗದೊಂದಿಗೆ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಕ್ರೀಡಾಕೂಟ ಹಾಗೂ ಪಂದ್ಯಾಟಗಳ ಆಯೋಜನೆ ಕುರಿತು ಪೂರ್ವಭಾವಿ ಆಯೋಜನಾ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರತರಲು ಕ್ರೀಡಾಕೂಟಗಳು ಸೂಕ್ತ ವೇದಿಕೆಯಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಮಾರ್ಗದರ್ಶನ ಹಾಗೂ ವಲಯದ ಎಲ್ಲಾ ಶಾಲೆಗಳ ಸಂಪೂರ್ಣ ಸಹಕಾರದೊಂದಿಗೆ ಈ ಬಾರಿಯ ಕ್ರೀಡಾಕೂಟವನ್ನು ಅತ್ಯಂತ ಶಿಸ್ತುಬದ್ಧ, ಸುಸಂಘಟಿತ ಹಾಗೂ ಮಾದರಿಯಾಗುವ ರೀತಿಯಲ್ಲಿ ಆಯೋಜಿಸಲು ನಮ್ಮ ಸಂಸ್ಥೆಯು ಸಂಪೂರ್ಣವಾಗಿ ಸಜ್ಜಾಗಿದೆ. ಶಾಲಾ ಶಿಕ್ಷಣ ಇಲಾಖೆ ಮತ್ತು ಸರ್ಕಾರ ನೀಡುವ ಯಾವುದೇ ಜವಾಬ್ದಾರಿಯನ್ನು ನಮ್ಮ ಸಂಸ್ಥೆಯು ಅತ್ಯಂತ ಮುತವರ್ಜಿ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಿಕೊಂಡು ಬಂದಿದ್ದು, ಈ ಕ್ರೀಡಾಕೂಟದ ಯಶಸ್ಸಿಗಾಗಿ ಪ್ರತಿಯೊಂದು ಹಂತದಲ್ಲೂ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡಲು ಬದ್ಧವಾಗಿದೆ, ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಮಾತನಾಡಿ, ಶಿಕ್ಷಣ ಇಲಾಖೆ ಹಾಗೂ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಈ ಬಾರಿಯ ಕ್ರೀಡಾಕೂಟ ಹಾಗೂ ಪಂದ್ಯಾಟಗಳು ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡಾಕೂಟದ ಉದ್ದೇಶ, ಮಹತ್ವ ಹಾಗೂ ಪಂದ್ಯಾಟಗಳ ಯಶಸ್ವಿ ಆಯೋಜನೆಗೆ ಅಗತ್ಯವಿರುವ ಮಾರ್ಗಸೂಚಿಗಳನ್ನು ವಿವರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ಪಂದ್ಯಾಟಗಳನ್ನು ಆಯೋಜಿಸಲು ಮುಂದೆ ಬಂದಿರುವ ಎಲ್ಲಾ ಶಾಲಾ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪ್ರಮುಖವಾಗಿವೆ. ವಿದ್ಯಾರ್ಥಿ ಸಮುದಾಯದ ಏಳಿಗೆಗಾಗಿ ಇಂತಹ ಅಭೂತಪೂರ್ವ ಕಾರ್ಯಕ್ರಮಗಳನ್ನು ಸಂಘಟಿಸಲು ಮತ್ತು ನೆರವು ನೀಡಲು ಸುಜ್ಞಾನ ಎಜುಕೇಶನ್ ಟ್ರಸ್ಟ್ ಸದಾ ಸಿದ್ಧವಾಗಿದೆ, ಎಂದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ (ಉಡಿಚಿಜe ೨) ಜಿಲ್ಲಾಧ್ಯಕ್ಷರಾದ ಕುಸುಮಾಕರ ಶೆಟ್ಟಿ,
ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಕಿಶನ್‌ರಾಜ್ ಶೆಟ್ಟಿ ಮಾತನಾಡಿದರು.
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಾಯರಾದ ಪ್ರದೀಪ್ ಸ್ವಾಗತಿಸಿದರೆ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ವಂದಿಸಿದರು.ಈ ಸಭೆಯಲ್ಲಿ ವಲಯದ ೧೦೦ಕ್ಕೂ ಹೆಚ್ಚಿನ ಶಾಲೆಗಳ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು, ಜಿಲ್ಲಾ, ತಾಲೂಕು ಹಾಗೂ ವಲಯ ಮಟ್ಟದ ವಿವಿಧ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

administrator

Related Articles

Leave a Reply

Your email address will not be published. Required fields are marked *

You cannot copy content of this page