ಉಡುಪಿಮಿತ್ರ ಪತ್ರಿಕೆ ಸುದ್ಧಿ :
ಉಡುಪಿ ಜು.೧೯:
ರಾಜ್ಯಾದ್ಯಂತ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲದ ಪರಿಸ್ಥತಿ ಎದುರಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಓಗಳು ಸಂಭವನೀಯ ಬರಗಾಲದ ವಿಪತ್ತನ್ನು ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
ಇಂದು ಬೆಂಗಳೂರಿನ ವಿಧಾನ ಸೌಧ ಕಚೇರಿ ಸಭಾಂಗಣದಲ್ಲಿ ರಾಜ್ಯದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓ ಅವರೊಂದಿಗೆ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ. ಬರಪರಿಸ್ಥಿತಿ ಉದ್ಭವಿಸಿರುವ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಬರದ ವಿಪತ್ತು ಎದುರಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಂದು ತಂಡವಾಗಿ ಕೆಲಸ ಮಾಡಬೇಕು. ಯುದ್ದೋಪಾದಿಯಲ್ಲಿ ಬರದ ನಿರ್ವಹಣೆ ಒತ್ತು ನೀಡಬೇಕು.
ಬರ ಸಂದರ್ಭದಲ್ಲಿನ ಸರ್ಕಾರ ಕೈಗೊಂಡಿರುವ ಕಾರ್ಯಗಳು ಹಾಗೂ ಕಾಳಜಿ ಜನರಿಗೆ ಮನದಟ್ಟಾಗುವ ರೀತಿಯಲ್ಲಿ ಅಧಿಕಾರಿಗಳು ಸರ್ಕಾರದ ಧ್ವನಿಯಾಗಿ ಕೆಲಸ ಮಾಡಬೇಕು.ವಿಪತ್ತು ಪರಿಹಾರ ಕಾರ್ಯಕ್ಕೆ ಸರ್ಕಾರ ಸನ್ನದ್ಧವಾಗಿದೆ.ಯಾವುದೇ ಹಣಕಾಸಿನ ಕೊರತೆಯಿಲ್ಲ. ಜನರಿಗೆ ಕುಡಿಯುವ ನೀರು ಪೂರೈಕೆಗೆ ಕೈಗೊಂಡ ಕ್ರಮಗಳ ಬಗ್ಗೆ ಜನತೆಗೆ ತಿಳಿಸಿ. ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓಗಳು ಕೃಷಿ,ತೋಟಗಾರಿಕೆ, ಪಶುಪಾಲನೆ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ಬರ ನಿರ್ವಹಣೆಗೆ ಕಾರ್ಯಯೋಜನೆ ರೂಪಿಸಬೇಕು. ಈ ಬಗ್ಗೆ ಪ್ರಜಾಸೇವಾ, ಕಂದಾಯ ಇಲಾಖೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಬರದ ಹಿನ್ನೆಲೆಯಲ್ಲಿ ಅಗತ್ಯ ಇರುವ ಜಿಲ್ಲೆಗಳಿಗೆ ಕೂಡಲೇ ಹಣ ಪೂರೈಸಲು ಈಗಾಗಲೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿನ ಎಲ್ಲ ಜಲಾಶಯಗಳಲ್ಲಿನ ನೀರಿನ ಮಟ್ಟದ ಪರಿಸ್ಥಿತಿಯ ಬಗ್ಗೆ ವಾರಕ್ಕೆ ಒಮ್ಮೆ ಮಾಹಿತಿ ನೀಡುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಮಾಡಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕಿನ ಸ್ಥಾಪಿಸಬೇಕು.
ಮಳೆ ಕೊರತೆ ಮುಂದುವರೆದಲ್ಲಿ ಮತ್ತಷ್ಟು ತಾಲೂಕುಗಳಲ್ಲಿ ಬರದ ಛಾಯೆ ಆವರಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸದ್ಯದಲ್ಲೇ ರಾಜ್ಯಕ್ಕೆ ಬರ ಪರಿಸ್ಥಿತಿ ಅವಲೋಕನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಲಿದೆ. ತಂಡಕ್ಕೆ ಅತ್ಯಗತ್ಯ ಮಾಹಿತಿ ಕೊಡಲು ತಯಾರಿ ಮಾಡಿಕೊಳ್ಳಬೇಕು. ಈಗಾಗಲೇ ರಾಜ್ಯದಿಂದ ಕಲಬುರಗಿ, ಬೆಳಗಾವಿನಲ್ಲಿ ಸಂಚರಿಸಿ ಬರದ ಅವಲೋಕನ ನಡೆಸಲಾಗಿದೆ. ಇದೆ ರೀತಿ ರಾಜ್ಯದ ಬೇರೆ ಬೇರೆ ಕಡೆಗೆ ಸಂಚರಿಸಿ ಬರ ಅವಲೋಕನ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ವಿಪತ್ತು ನಿರ್ವಹಣೆ ಅನುವಾಗುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣಕಾಸಿನ ನೆರವು ಒದಗಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ಅಕೌಂಟನಲ್ಲಿ ಅಂದಾಜು
೩೯೭ ಕೋಟಿ ರೂ ಹಣಯಿದೆ. ರಾಜ್ಯದ ಯಾದಗಿರಿ, ವಿಜಯಪುರ ಸೇರಿದಂತೆ ಇನ್ನೀತರ ಕಡೆ ಜನತೆ ಗುಳೆ ಹೊರಟಿದ್ದಾರೆ ಎನ್ನುವ ಮಾಹಿತಿಯಿದೆ. ಜನತೆ ಗುಳೆ ಹೋಗುವುದನ್ನು ತಪ್ಪಿಸಲು ಎಲ್ಲ ಜಿಲ್ಲೆಗಳಲ್ಲಿ ಕೂಡಲೇ ವಿಬಿ- ಜಿ ರಾಮ ಜಿ ಯೋಜನೆಯಡಿ ಉದ್ಯೋಗ ಒದಗಿಸಬೇಕು. ರಾಜ್ಯದ ೪೮೭ ಗ್ರಾಮ ಪಂಚಾಯತಗಳಲ್ಲಿ ಜನತೆಗೆ ಉದ್ಯೋಗ ಕೊಡುವ ಕಾರ್ಯಗಳು ಆರಂಭವಾಗಿವೆ. ಬರ ಪರಿಸ್ಥಿತಿಯ ಗಂಭೀರತೆ ಅರಿತು ರಾಜ್ಯದ ೨,೪೪೬ ಗ್ರಾಪಂಗಳಲ್ಲೂ ಕೂಡಲೇ ವಿಬಿ ಜಿ ರಾಮ್ ಜಿ ಯೋಜನೆಯ ಕಾರ್ಯ ಆರಂಭಿಸಲು ಸಿಇಓಗಳಿಗೆ ಸೂಚನೆ ನೀಡಿದರು.
ಎಸ್ ಐ ಆರ್ ಕಾರ್ಯವು ಎಲ್ಲ ಜಿಲ್ಲೆಗಳಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕಾರ್ಯಪ್ರವೃತ್ತರಾಗಬೇಕು ,ಯಾರೊಬ್ಬರ ಆರ್ಹಮತದಾರರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದರು.
ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮಾತನಾಡಿ ರಾಜ್ಯದ ಜನತೆಗೆ ಶುದ್ಧ ಕುಡಿವ ನೀರು ಪೂರೈಸಬೇಕು. ಈ ದಿಶೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶುದ್ಧ ಕುಡಿವ ನೀರಿನ ಘಟಕಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸುಮಾರು ೭೫ ವರ್ಷಗಳ ಹಿಂದೆ ರಾಜ್ಯದಲ್ಲಿ ಇಂತಹ ಬರದ ದುಸ್ತಿತಿ ಎದುರಾಗಿತ್ತು. ೧೯೬೫ ಮತ್ತು ೧೯೭೨ರಲ್ಲಿ ಸಹ ಇಂತಹ ಬರದ ಛಾಯೆ ರಾಜ್ಯದಲ್ಲಿ ಆವರಿಸಿತ್ತು. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಉಷ್ಣಾಂಶದ ಪ್ರಮಾಣ ಏರಿಕೆ ಆಗುತ್ತಿದೆ. ಹೆಚ್ಚಿನ ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಮುಂದುವರೆದಿದೆ. ರಾಜ್ಯದ ಅಂದಾಜು ೮೮ ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿತಿದೆ ಎಂದು ವರದಿಯಾಗುತ್ತಿದೆ. ಜನರಿಗೆ ಕುಡಿವ ನೀರು ಕೊಡಲೇಬೇಕು. ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸಬೇಕು.ಜಾನುವಾರುಗಳಿಗೆ ಸಹ ಕುಡಿವ ನೀರು ಮತ್ತು ಮೇವು ಪೂರೈಕೆಗೆ ಸಹ ಒತ್ತು ಕೊಡಬೇಕು. ಈ ಎಲ್ಲದರ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಿ ಕ್ರಮ ವಹಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಅಂಕಿ ಸಂಖ್ಯೆಗಳ ಮಾಹಿತಿ ಆಯಾ ತಾಲ್ಲೂಕುವಾರು ಅಧಿಕಾರಿಗಳಲ್ಲಿ ಇರಬೇಕು. ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಯುವನಿಧಿ, ಗೃಹಜ್ಯೊತಿ ಯೋಜನೆಗಳ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರಿಂದ ನಿರಂತರ ಸೂಚನೆ ಹೋಗಬೇಕು. ಆಯಾ ಇಲಾಖೆಗಳ ವಿವಿಧ ಯೋಜನೆಗಳ ಅನುಷ್ಠಾನದ ಯಶೋಗಾಥೆಯ ಸಂಕ್ಷಿಪ್ತ ಮಾಹಿತಿಯು ನಿರಂತರವಾಗಿ ವಾರ್ತಾ ಇಲಾಖೆಯ ಮೂಲಕ ಪತ್ರಿಕೆಗಳಿಗೆ ಹೋಗಬೇಕು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕರು ಸರ್ಕಾರಿ ಶಾಲೆಗಳ ಶಿಕ್ಷಕ ಕೊರತೆ ಹಾಗೂ ಪಾಠ ಪ್ರಚನಗಳ ಬಗ್ಗೆ ಗಮನ ಹರಿಸಬೇಕು. ಎಂದು ಸೂಚನೆ ನೀಡಿದರು.
ವಿಡಿಯೋ ಸಂವಾದಲ್ಲಿ . ಇಂಧನ ಸಚಿವ ಕೆ.ಜೆ. ಜಾರ್ಜ್, ನೀರಾವರಿ ಸಚಿವರಾದ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ ಖಂಡ್ರೆ, ಆರೋಗ್ಯ ಸಚಿವ.ಟಿ. ಖಾದರ್, ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳ ಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಕೋಠಡಿಯಿಂದ ವಿಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ , ಜಿ.ಪಂ ಸಿಇಓ ಪ್ರತೀಕ್ ಬಾಯಲ್ , ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಾಲೂಕಿನ ತಹಶೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.



