ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿಮಿತ್ರ ಪತ್ರಿಕೆ ಸುದ್ಧಿ:
ಕೋಟ (ಬ್ರಹ್ಮಾವರ): ಸಹಕಾರಿ ಕ್ಷೇತ್ರದ ಸಿಬ್ಬಂದಿಗಳು ಸೂಕ್ತ ತರಬೇತಿ ಪಡೆದು, ಸಹಕಾರಿ ನಿಯಮಗಳನ್ನು ಅರಿತು ಗ್ರಾಹಕರೊಂದಿಗೆ ವ್ಯವಹರಿಸಬೇಕು. ಸಾರ್ವಜನಿಕರ ಹಣವನ್ನು ನಿರ್ವಹಿಸುವಾಗ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿದರೆ ಸಂಘದ ಮೇಲೆ ಜನರ ವಿಶ್ವಾಸ ಹೆಚ್ಚುವುದರೊಂದಿಗೆ ಸಂಸ್ಥೆಯೂ ಅಭಿವೃದ್ಧಿ ಹೊಂದಲಿದೆ ಎಂದು ಖಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ಬೆಂಗಳೂರು), ಉಡುಪಿ ಜಿಲ್ಲಾ ಸಹಕಾರ ಯೂನಿಯನ್ (ಉಡುಪಿ), ಕೋಟ ಸಹಕಾರಿ ವ್ಯವಸಾಯಕ ಸಂಘ, ಕೋಟತಟ್ಟು-ಪಡುಕೆರೆ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ೭೩ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕೋಟ ಸಹಕಾರಿ ಬ್ಯಾಂಕ್‌ನ ಬಿ.ಸಿ. ಹೊಳ್ಳ ಸಹಕಾರ ಸಭಾಭವನದಲ್ಲಿ ಸೋಮವಾರ ನಡೆದ ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರದ ಮೂಲಕ ಸಹಕಾರ ಸಂಸ್ಥೆಗಳಲ್ಲಿ ಪರಿಣಾಮಕಾರಿ ಬದಲಾವಣೆ ಕುರಿತ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು ಕೋಟ ಸಹಕಾರಿ ವ್ಯವಸಾಯಕ ಸಂಘವು ಆರ್ಥಿಕ ವ್ಯವಹಾರದ ಜೊತೆಗೆ ವ್ಯಾಪಾರ ಮಳಿಗೆಗಳನ್ನು ಸ್ಥಾಪಿಸಿ ಉತ್ತಮ ಲಾಭ ಗಳಿಸುತ್ತಿದೆ. ಇದೇ ಮಾದರಿಯಲ್ಲಿ ಖಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ವತಿಯಿಂದಲೂ ಮುಂದಿನ ವರ್ಷ ೧೫ ಕೋಟಿ ರೂ. ವೆಚ್ಚದಲ್ಲಿ ಸರ್ವಸರಕು ಮಳಿಗೆಯನ್ನು ಆರಂಭಿಸಲಾಗುವುದು ಎಂದು ತಿಳಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಲಾವಣ್ಯ ಕೆ.ಆರ್. ಮಾತನಾಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಹಕಾರ ಕ್ಷೇತ್ರ ಅತ್ಯಂತ ಪ್ರಬಲವಾಗಿದ್ದು, ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ಸಹಕಾರ ಸಂಘಗಳು ಕೇವಲ ಲಾಭದ ಉದ್ದೇಶ ಹೊಂದದೆ ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಕೋಟ ಹಾಗೂ ಖಂಬದಕೋಣೆ ಸಹಕಾರಿ ಸಂಘಗಳು 3೦೦ ಕೋಟಿ ರೂ.ಗೂ ಅಧಿಕ ಠೇವಣಿ ಹೊಂದಿರುವುದು ಹೆಮ್ಮೆಯ ಸಂಗತಿ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಮಾತನಾಡಿ, ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಳೆದ ಬಾರಿ 11 ಹಾಗೂ ಈ ಬಾರಿ 15 ದನಗಳನ್ನು ವಿತರಿಸಲಾಗಿದೆ. ಸಂಘವು ೬ ಕೋಟಿ ರೂ. ಲಾಭದಲ್ಲಿದೆ ಎಂದು ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಶೆಟ್ಟಿ ಹಾಗೂ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಜಯರಾಮ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜಿ. ಸುಧೀರ್ ಕುಮಾರ್, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ, ಕೋಟತಟ್ಟು-ಪಡುಕೆರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೆ. ಶಿವಮೂರ್ತಿ, ಕೋಟ ಸಹಕಾರಿ ಸಂಘದ ನಿರ್ದೇಶಕರಾದ ರವೀಂದ್ರ ಕಾಮತ್, ಕೆ. ಉದಯಕುಮಾರ್ ಶೆಟ್ಟಿ, ಮಹೇಶ್ ಶೆಟ್ಟಿ, ರಾಘವೇಂದ್ರ ಮಧ್ಯಸ್ಥ, ರಂಜಿತ್ ಕುಮಾರ್, ಜಿ. ಅಜಿತ್ ದೇವಾಡಿಗ, ಚಂದ್ರ ಪೂಜಾರಿ, ವಸಂತಿ ಪೂಜಾರ್ತಿ, ಪ್ರೇಮಾ, ರಶ್ಮಿತಾ ದಿನಕರ ಶೆಟ್ಟಿ, ಶಿಲ್ಪಿ ಶೇಖರ್ ಮರಕಾಲ, ಕೆ. ರಾಜಾರಾಮ್ ಶೆಟ್ಟಿ ಉಪಸ್ಥಿತರಿದ್ದರು.

ನಿರ್ದೇಶಕ ಟಿ. ಮಂಜುನಾಥ್ ಗಿಳಿಯಾರ್ ಪ್ರಸ್ತಾವನೆಗೈದು ಸ್ವಾಗತಿಸಿದರು. ನಿಶಾ ಪ್ರಾರ್ಥಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ವಂದಿಸಿದರು.



